ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗಿದ್ದು, ನಗರದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಂಜೆಯಾಗುತ್ತಿದ್ದಂತೆ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯತ್ತ ಜನರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದು, ಈ ಭಾಗದಲ್ಲಿ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿಶೇಷ ಮಾರ್ಗ ಕಲ್ಪಿಸಲಾಗಿದೆ.
ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ನಿಗಾ ವಹಿಸಲಾಗಿದೆ. ರಸ್ತೆಯ ಎರಡೂ ಬದಿಯ ಕಂಬಗಳಿಗೆ ಪ್ರತಿ 30 ಅಡಿಗೆ ಒಂದು ಪಾಯಿಂಟ್ ನಂತೆ ಕ್ಯಾಮರಾ ಅಳವಡಿಸಲಾಗಿದ್ದು, ಕ್ಷಣ ಕ್ಷಣಕ್ಕೂ ಪರಿಶೀಲನೆ ನಡೆಸಲಾಗುತ್ತಿದೆ.
ಒಂದೇ ಕಡೆ ಕುಳಿತು ಸಿಸಿ ಕ್ಯಾಮರಾ ಪರಿಶೀಲಿಸಲು ಪೊಲೀಸರು ವಾರ್ ರೂಂ ವ್ಯವಸ್ಥೆ ಮಾಡಿದ್ದಾರೆ. ಸಿಸಿಟಿವಿ ಗಮನಿಸಲೆಂದೇ 2 ವಿಶೇಷ ತಂಡ ರಚನೆ ಮಾಡಲಾಗಿದೆ. ಇನ್ನು ರಾತ್ರಿ 10 ಗಂಟೆಗೆ ಬೆಂಗಳೂರಿನ ಎಲ್ಲಾ ಫ್ಲೈ ಓವರ್ ಗಳನ್ನು ಬಂದ್ ಮಾಡಲಾಗುತ್ತಿದೆ. ಏರ್ ಪೋರ್ಟ್ ಫ್ಲೈ ಓವರ್ ಹೊರತುಪಡಿಸಿ ಉಳಿದ ಎಲ್ಲಾ ಮೇಲ್ಸೇತುವೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗುತ್ತಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ.