ಬೆಂಗಳೂರು ನಗರ ಜಿಲ್ಲೆ : ದೀಪಾವಳಿ ಹಬ್ಬವನ್ನು ನವೆಂಬರ್ 11 ರಿಂದ 15 ರವರೆಗೆ ಆಚರಿಸಲಾಗುತ್ತಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಈ ಬಾರಿಯೂ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ ಬಳಸುವಂತಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ಕರೆದಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿನ್ನೆಯಿದ್ದು ಕ್ಯೂಆರ್ ಕೋಡ್ ಇರುವ ಪಟಾಕಿಗಳನ್ನೇ ಉಪಯೋಗಿಸಬೇಕು ಎಂದರು.
ದೀಪಾವಳಿ ಹಬ್ಬದ ಸಂಧರ್ಭದಲ್ಲಿ ರಾತ್ರಿ 8 ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ ಮತ್ತು 125 ಡೆಸಿಬಲ್ ಮೇಲ್ಪಟ್ಟ ಪಟಾಕಿಗಳ ಸಿಡಿಸುವುದನ್ನು ನಿಷೇಧಿಸಲಾಗಿದೆ. 100 ಡೆಸಿಬಲ್ ಗಳಿಗಿಂತ ಹೆಚ್ಚು ಇದ್ದರೆ ಅವುಗಳು ಹಸಿರು ಪಟಾಕಿ ಎನಿಸಿಕೊಳ್ಳುವುದಿಲ್ಲ ಅದನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತಿಳಿಸಿದರು.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು ಎಂದು ಹೇಳಿದರು.
ಹೆಚ್ಚು ಶಬ್ದ ಮಾಡುವ ಪಟಾಕಿಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆಯಾ ಭಾಗದ ಮುಖ್ಯಾಧಿಕಾರಿಗಳು, ತಾಲ್ಲೂಕು ಆಯೋಗ್ಯಾಧಿಕಾರಿ, ತಹಶೀಲ್ದಾರರು, ಜಿಲ್ಲಾ ಪರಿಸರ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಅಧಿಕಾರಿಗಳು, ಆಸಕ್ತ ನಾಗರೀಕರು ಹಾಗೂ ಸ್ಥಳೀಯ ಸರ್ಕಾರೇತರ ಸಂಘ ಸಂಸ್ಥೆಗಳ ಪತ್ರಿನಿಧಿಗಳ ನೇತೃತ್ವದಲ್ಲಿ ಕಾರ್ಯಪಡೆಯನ್ನು ರಚನೆ ಮಾಡಬೇಕು ಎಂದು ಸಲಹೆ ನೀಡಿದರು.
ತಹಶೀಲ್ದಾರರು, ಪಿಡಿಓಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇದಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಬೇಕು, ಒಂದುವೇಳೆ ಅಧಿಕಾರಿಗಳು ನಿರ್ಲಕ್ಷ್ಯತೋರಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ದು ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಅಧಿಕಾರಿಗಳು ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಾಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೊ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾಲ್ ಗಳಲ್ಲಿ ಕರಪತ್ರ/ಬಿತ್ತಿಪತ್ರಗಳನ್ನು ಹಂಚುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವಂತೆ ಸೂಚಿಸಿದರು.
ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇದಿತ ಪಟಾಕಿಗಳನ್ನು ಸಾಗಾಟ ಮಾಡುವ ನಿರೀಕ್ಷೆಯಿದ್ದು ದೀಪಾವಳಿ ಹಬ್ಬ ಮುಗಿಯುವವರೆಗು ಜಿಲ್ಲೆಯ ಎಲ್ಲಾ ಗಡಿಭಾಗಗಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸುವಂತೆ ತಿಳಿಸಿದರು.
ಸಭೆಯಲ್ಲಿ ಅಪಜಿಲ್ಲಾಧಿಕಾರಿ ಟಿ.ಎನ್. ಕೃಷ್ಣಮೂರ್ತಿ, ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಪರಿಸರ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.