ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಾಂಡೌಸ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು, ಪರಿಣಾಮ ಕರ್ನಾಕದ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಜಡಿ ಮಳೆ, ಶೀತ ಗಾಳಿಗೆ ಜನರು ತತ್ತರಿಸಿದ್ದು, ಮನೆಯಿಂದ ಹೊರಬರಲೂ ಸಾಧ್ಯಾವಗದ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಗಾಳಿ-ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಹಾಗೂ ನಾಳೆ ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಮಂಡ್ಯ, ರಾಮನಗರ ಸೇರಿದಂತೆ 10 ಜಿಲ್ಲೆಗಳಲ್ಲಿ ಶೀತ ಗಾಳಿ ಮಳೆ ಹೆಚ್ಚಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೋಲಾರ ಜಿಲ್ಲೆಯಾದ್ಯಂತ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.