ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೇ 21ರ ವರೆಗೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶನಿವಾರ ಹಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಕರಾವಳಿ, ಬೆಂಗಳೂರು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 6 ರಿಂದ 11 ಸೆ.ಮೀ.ವರೆಗೆ ಮಳೆಯಾಗುವ ಸಂಭವ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಮೇ 19ರಿಂದ 21ರವರೆಗೆ 11 ರಿಂದ 20 ಸೆ.ಮೀ.ವರೆಗೆ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮೇ 20ರಂದು ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.