ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ರಫೀಕ್, ಸೊಹೇಬ್ ಶೇಖ್, ಅಲಾಮಿ ಹುಸೇನ್, ಅಜೀಂ ಸೇರಿ 13 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಆರೋಪಿಗಳು ಯುವತಿಯನ್ನು ಬಾಂಗ್ಲಾದಿಂದ ಅಕ್ರಮವಾಗಿ ಭಾರತಕ್ಕೆ ಕರೆಸಿದ್ದರು. ಕೆಲಸ ಕೊಡಿಸುವುದಾಗಿ ಭಾರತಕ್ಕೆ ಕರೆದುಕೊಂಡು ಬಂದಿದ್ದ ಆರೋಪಿಗಳು ಬೆಂಗಳೂರಿನಲ್ಲಿ ಯುವತಿಗೆ ಬಾಡಿಗೆ ಮನೆ ಮಾಡಿಕೊಟ್ಟಿದ್ದರು. ಬಳಿಕ ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದರು. ಆಧಾರ್, ಪಾನ್ ಕಾರ್ಡ್ ಸೇರಿ ನಕಲಿ ದಾಖಲೆ ಸೃಷ್ಟಿಸಿದ್ದರು.
ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದರು. ವಿಡಿಯೋ ವೈರಲ್ ಆದ ನಂತರ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ರಾಮಮೂರ್ತಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದರು. ತನಿಖೆಯ ವೇಳೆ ಮಾನವ ಕಳ್ಳಸಾಗಣೆ, ನಕಲಿ ದಾಖಲೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.