ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ದೂರು ದಾಖಲಾದ ಬೆನ್ನಲ್ಲೇ ಬಂಗಾಳಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ತಮ್ಮ ವಶಕ್ಕೆ ಒಪ್ಪಿಸಬೇಕೆಂದು ಆಕ್ರೋಶಗೊಂಡ ಸಾರ್ವಜನಿಕರು ಪೊಲೀಸ್ ಠಾಣೆ ಎದುರು ತಡರಾತ್ರಿವರೆಗೂ ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಕೂಡ ಪ್ರತಿಭಟನೆ ನಡೆಸಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹೆಬ್ಬಾಳ ಶಾಸಕ ಬೈರತಿ ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾನಿರತರ ಮನವೊಲಿಸಿದ್ದಾರೆ. ಹೆಬ್ಬಾಳದ ಬಾಡಿಗೆ ಮನೆಯಲ್ಲಿ ನೆಲೆಸಿರುವ 25 ವರ್ಷದ ಯುವಕ ಬಾಲಕಿಗೆ ಆಟಿಕೆ ಕೊಡಿಸುವ ಆಸೆ ತೋರಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆಕೆಯ ಪೋಷಕರು ಕೆಲಸಕ್ಕೆ ಹೋಗಿದ್ದು ಸಹೋದರ ಮಾತ್ರ ಮನೆಯಲ್ಲಿದ್ದ.
ಬಾಲಕಿಯ ದೇಹದಲ್ಲಿ ಗಾಯದ ಗುರುತುಗಳು ಇರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಪ್ರಶ್ನಿಸಿದಾಗ ಬಾಲಕಿ ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ. ಆಕೆಯನ್ನು ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದೆ. ವಿಷಯ ತಿಳಿದ ನೂರಾರು ಸಾರ್ವಜನಿಕರು ನಗರ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಯನ್ನು ಒಪ್ಪಿಸಬೇಕೆಂದು ಆಗ್ರಹಿಸಿದ್ದಾರೆ.