ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲೆಗಳು, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲಿಯೂ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್, ಬೆಂಗಳೂರಿನ ಎಲ್ಲಾ ಶಾಲೆ, ಪ್ರಾಥಮಿಕ ಕೇಂದ್ರಗಳು, ಅಂಗನವಡಿಗಳಿಗೆ ನಾಳೆ ಅಕ್ಟೋಬರ್ 16ರಂದು ರಜೆ ಘೋಷಿಸಿದ್ದಾರೆ.
ಕಾಲೇಜುಗಳಿಗೆ ರಜೆ ಘೋಷಣೆ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಕೆಲ ಕಾಲೇಜುಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮರು ಪರೀಕ್ಷೆ ನಿಗದಿ ಕಷ್ಟವಾಗಿರುವುದರಿಂದ ಕಾಲೇಜುಗಳಿಗೆ ರಜೆ ಘೋಷಣೆ ಬಗ್ಗೆ ವಿವಿಗಳ ಜೊತೆ ಚರ್ಚಿಸಿ ತೀರ್ಮಾನಿಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ಬೆಂಗಳೂರು ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ತೆರಳದಂತೆ ಹಾಗೂ ವಿದ್ಯುತ್ ಕಂಬ, ತಂತಿ ಮೊದಲಾದ ಅಪಾಯಗಳ ಬಗ್ಗೆ ಜಾಗೃತವಾಗಿರುವಂತೆ ಸೂಚಿಸಿದ್ದಾರೆ.