ಬೆಂಗಳೂರು: ರಾಜ್ಯಾದ್ಯಂತ ಈಗಾಗಲೇ ಮೈ ಕೊರೆವ ಚಳಿ ಆರಂಭವಾಗಿದೆ. ಈ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಫೆಂಗಲ್ ಚಂಡಮಾರುತವುಂತಾಗಿದ್ದು, ತಮಿಳುನಾಡು ಹಾಗೂ ಪುದುಚೆರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಭೂಕುಸಿತ ಸಂಭವಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಸದ್ಯ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಡಿ.1ರಿಂದ ಡಿ.3ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಲಿದೆ.