ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಮುಂದಿನ ಕೆಲ ಗಂಟೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಒಟ್ಟು 8 ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.