ಕೌಟುಂಬಿಕ ವ್ಯಾಜ್ಯಗಳಲ್ಲಿ ದಂಪತಿ ವಿಚ್ಛೇದನ ಪಡೆದುಕೊಂಡ ವೇಳೆ ಮಗು ಯಾರ ಸುಪರ್ದಿಯಲ್ಲಿ ಇರಬೇಕು ಎಂಬುದನ್ನು ನಿರ್ಧರಿಸುವ ಸಂದರ್ಭದಲ್ಲಿ ಮಗುವಿನ ಹಿತವನ್ನು ಪ್ರಮುಖವಾಗಿ ಪರಿಗಣಿಸಬೇಕು ಎಂದು ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಪ್ರಕರಣವೊಂದರ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಶರ್ಮಿಳಾ ದೇಶಮುಖ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿ, ಬಾಲಕಿಯನ್ನು ತಾಯಿಯ ಸುಪರ್ದಿಗೆ ಒಪ್ಪಿಸಿ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಎತ್ತಿ ಹಿಡಿದಿದೆ.
ಪ್ರಕರಣದ ವಿವರ: ಪರಸ್ಪರ ಭಿನ್ನಾಭಿಪ್ರಾಯ ಹೊಂದಿದ್ದ ದಂಪತಿ, ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ವೇಳೆ ಎಂಟು ವರ್ಷದ ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿ ಪತಿ ಸಲ್ಲಿಸಿದ್ದ ಮನವಿಯನ್ನು ಕೌಟುಂಬಿಕ ನ್ಯಾಯಾಲಯ ತಳ್ಳಿಹಾಕಿ ಬಾಲಕಿಯನ್ನು ತಾಯಿಯ ಸುಪರ್ದಿಗೆ ಒಪ್ಪಿಸಿತ್ತು.
ಬಾಂದ್ರಾ ಕೌಟುಂಬಿಕ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಪತಿ, ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶರ್ಮಿಳಾ ದೇಶಮುಖ್ ಅವರಿದ್ದ ನ್ಯಾಯಪೀಠ, ಕೌಟುಂಬಿಕ ವ್ಯಾಜ್ಯದ ವೇಳೆ ಮಗುವಿನ ಹಿತ ಪ್ರಮುಖವಾಗಿ ಪರಿಗಣಿಸಬೇಕು ಎಂದು ಅಭಿಪ್ರಾಯಪಟ್ಟು ಪತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಎತ್ತಿ ಹಿಡಿದಿದೆ.