ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ರಾಜ್ಯದಲ್ಲಿಯೂ ಬೆಂಬಲ ವ್ಯಕ್ತವಾಗಿದ್ದು, ಕೋಲಾರ ನಗರದ ಹೊಸ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಗಿದೆ.
ರಸ್ತೆಯಲ್ಲಿಯೇ ಜೋಳ, ಕಡಲೆ ಕಾಯಿ ಬೇಯಿಸಿ ವಿತರಿಸಲಾಗಿದೆ. ಕೋಲಾರದ ರಸ್ತೆಯಲ್ಲಿ ಬೆಂಕಿ ಹಚ್ಚಿ ಬಜ್ಜಿ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ ಮತ್ತೊಂದು ಕಡೆ ರಸ್ತೆಯಲ್ಲಿ ಟೀ ಮಾಡಿ ರೈತರ ಬದುಕು ಬೀದಿಗೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡ ಟೋಲ್ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ರೈತ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧರಣಿ ನಿರತರಿಂದ ಆಕ್ರೋಶ ವ್ಯಕ್ತವಾಗಿದೆ.
ಕೊಪ್ಪಳ ನಗರದ ಕೇಂದ್ರೀಯ ಬಸ್ ನಿಲ್ದಾಣದ ಬಳಿಯ ಟೈಯರ್ ಗೆ ಬೆಂಕಿಹಚ್ಚಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಬಾಯಿ ಬಡಿದುಕೊಂಡು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಭಾರತ್ ಬಂದ್ ಬೆಂಬಲಿಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಬಸ್ ನಿಲ್ದಾಣದ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ. ಬಸ್ ಸಂಚಾರಕ್ಕೆ ತಡೆ ನೀಡಿ ರೈತರು, ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಭಾರತ್ ಬಂದ್ ಬೆಂಬಲಿಸಿ ದಾವಣಗೆರೆಯಲ್ಲಿ ರೈತರು, ಕಾರ್ಮಿಕ ಸಂಘಟನೆಗಳು ಹೋರಾಟ ನಡೆಸಿವೆ. ಹದಡಿ ರಸ್ತೆಯಲ್ಲಿ ಪ್ರಧಾನಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಬಂದ್ ಬೆಂಬಲಿಸಿ ಪಂಜಿನ ಮೆರವಣಿಗೆ ನಡೆಸಲಾಗಿದೆ. ಶಿಡ್ಲಘಟ್ಟ ವೃತ್ತದಲ್ಲಿ ರೈತರು, ಕಾರ್ಮಿಕ ಸಂಘಟನೆಗಳು, ಪ್ರಗತಿಪರ ಸಂಘಟನೆಗಳಿಂದ ಪಂಜಿನ ಮೆರವಣಿಗೆ ನಡೆಸಲಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮೆರವಣಿಗೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಟೌನ್ ಹಾಲ್ ಎದುರು ಒಂದು ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದ್ದು, ಬ್ಯಾರಿಕೇಡ್ ಅಳವಡಿಸಲಾಗಿದೆ. ಸಂಚಾರ ದಟ್ಟಣೆ ತಡೆಗೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ನೃಪತುಂಗ ರಸ್ತೆಯಲ್ಲಿ ವಾಹನಗಳ ದ್ವಿಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಮೈಸೂರು ಬ್ಯಾಂಕ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆದರೆ ನೃಪತುಂಗ ರಸ್ತೆಯಲ್ಲಿ ಸಂಚರಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಬಸ್ ಗಳ ಸಂಚಾರ ಯಥಾಸ್ಥಿತಿಯಲ್ಲಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಗಳು ಎಂದಿನಂತೆ ಸಂಚರಿಸುತ್ತಿವೆ. ಆಟೋ, ಓಲಾ, ಉಬರ್ ಸೇವೆಯೂ ಎಂದಿನಂತೆ ಲಭ್ಯವಿದೆ.