ಬೀದರ್: ಬೀದರ್ ಜಿಲ್ಲೆ ಭಾಲ್ಕಿಯಲ್ಲಿ ಇಂದು ಶತಾಯುಷಿ ಬೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.
ಇಂದಿನಿಂದ ಎರಡು ದಿನಗಳ ಕಾಲ ಭಾಲ್ಕಿಯ ಬಿಕೆಐಟಿ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಐವತ್ತು ಸಾವಿರಕ್ಕೂ ಅಧಿಕ ಅಭಿಮಾನಿಗಳು, ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಮಾಹಿತಿ ನೀಡಿದ್ದು, ಕಾರ್ಯಕ್ರಮದಲ್ಲಿ ಸುತ್ತೂರು, ಶ್ರೀಶೈಲ, ಸಿರಿಗೆರೆ, ಸಿದ್ದಗಂಗಾ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಪೀಠಾಧಿಪತಿಗಳು ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕ ನಾಯಕ ಅಭಿನಂದನಾ ಗ್ರಂಥ ಲೋಕಾಪಣೆ ಮಾಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿಗಳಾದ ಎಂ. ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್, ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಭಜನೆ, ವಚನ ಗಾಯನ, ನೂಪುರ ನೃತ್ಯ, ಭೀಮಣ್ಣ ಖಂಡ್ರೆ ಅವರ ಜೀವನ ದರ್ಶನ ಕುರಿತ ಸಾಕ್ಷ್ಯ ಚಿತ್ರ ಪ್ರದರ್ಶನ, ಗುರುವಂದನೆ ನಡೆಯಲಿದೆ ಎಂದು ತಿಳಿಸಿದ್ದಾರೆ.