ವಿಜಯಪುರ: ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾನದಿಗೆ ನೀರು ಬಿಡಿಗಡೆ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಹಾಗೂ ಇಂಡಿ ತಾಲೂಕಿನ ಭೀಮಾನದಿ ಪಟ್ಟಣದಲ್ಲಿ ನದಿ ತಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಜಿಲ್ಲಾಧಿಕಾರಿ ಟಿ ಭೂಬಾಲನ್ ಸೂಚನೆ ಮೇರೆಗೆ ಭೀಮಾನದಿ ಪಟ್ಟದ ನದಿ ತಟದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಅಲ್ಲದೇ ನದಿ ತಟದಲ್ಲಿರುವ ಗ್ರಾಮಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಕುಡಿಯುವ ನೀರಿನ ಯೋಜನೆಗಳಿಗೆ ನೀರಿನ ಅಭಾವವುಂಟಾಗಬಾರದು ಎಂಬ ಕಾರಣಕ್ಕೆ ನದಿಯ ನೀರನ್ನು ಕೃಷಿಗೆ ಬಳಕೆ ಮಾಡಬಾರದು ಎಂಬ ಕಾರಣಕ್ಕೆ ಅಧಿಕಾರಿಗಳು ಗ್ರಾಮಗಳ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.
ಈ ನಡುವೆ ಅಧಿಕಾರಿಗಳ ಧೋರಣೆ ಖಂಡಿಸಿ ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ನದಿ ನೀರನ್ನು ಬಳಕೆ ಮಾಡದಂತೆ ಕ್ರಮ ಕೈಗೊಳ್ಳುವುದನ್ನು ಬಿಟ್ಟು ನದಿ ಭಾಗದಲ್ಲಿರುವ ಗ್ರಾಮಗಳ ಹಾಗೂ ಸುತ್ತಮುತ್ತಲ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದು ಸರಿಯಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.