ಬೀದರ್: ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪ್ರಾಂಶುಪಾಲ ಹಾಗೂ ಹಾಸ್ಟೇಲ್ ವಾರ್ಡನ್ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಊಟದ ವಿಚಾರವಾಗಿ ವಾರ್ಡನ್ ಹಾಗೂ ಪ್ರಿನ್ಸಿಪಾಲ್ ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ವಸತಿ ಶಾಲೆಯ ಹಾಸ್ಟೇಲ್ ಊಟದಲ್ಲಿ ಹುಳು ಹಾಗೂ ಮೆನು ಚಾರ್ಟ್ ಪ್ರಕಾರ ಊಟ ನೀಡದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರು ಹಾಗೂ ವಾರ್ಡನ್ ಹಲ್ಲೆ ನಡೆಸಿದ್ದರು.
ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ವಸತಿ ಶಾಲೆ ಪ್ರಿನ್ಸಿಪಾಲ್ ಭಗವಂತ ಕಾಂಬ್ಳೆ ಹಾಗೂ ವಾರ್ಡನ್ ಶಿವಕುಮಾರ್ ವೈಜಪ್ಪ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.