ಬೆಂಗಳೂರು: ನಾಳಿನ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಬಗ್ಗೆ ಚರ್ಚೆ ನಡೆಯಲಿದೆ. ಏನೇ ಮಾರ್ಗಸೂಚಿ ತಂದರೂ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ತರಬೇಕಾಗುತ್ತದೆ. ಈ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೋವಿಡ್ ಕೇಸ್ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ನಿಯಂತ್ರಣದಲ್ಲಿದೆ. ಹಾಗಾಗಿ ಸಮಗ್ರ ಮಾಹಿತಿ ಪಡೆದು, ನಾಳೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಯಾವುದೇ ಮಾರ್ಗಸೂಚಿ ಜಾರಿ ಮಾಡಿದರೂ ರಾಜ್ಯಕ್ಕೆ ಅನ್ವಯವಾಗುವಂತೆ ಜಾರಿಯಾಗಲಿದೆ ಎಂದರು.
ಒಮಿಕ್ರಾನ್ ಹಾಗೂ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ರೀತಿ ಮುಂಜಾಗೃತಾ ಕ್ರಮ ಕೈಗೊಂಡಿದೆ. ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಮಾಸ್ಕ್, ದೈಹಿಕ ಅಂತರ ಪಾಲಿಸುವುದು ಅಗತ್ಯ. ಶಾಲೆಗಳಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಬೇಕಿದೆ. ಸಧ್ಯಕ್ಕೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.