
ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ತಾರಕಕ್ಕೇರಿದೆ. ಇದೀಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಿದ್ದ ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವಂತಹ ಮಾತುಗಳನ್ನಾಡಿದ್ದಾರೆ. ಅಲ್ಲದೆ ಭಾರತದ ಸಾರ್ವಭೌಮತ್ವದ ವಿರುದ್ಧ ಮಾತನಾಡಿದ್ದಾರೆ ಎಂದು ಶೋಭಾ ಕರಂದ್ಲಾಜೆ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ನಾನು ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಸೋನಿಯಾ ಗಾಂಧಿಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದರು.