ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಎಬಿವಿಪಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ 40 ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಜಯಮಹಲ್ ನಲ್ಲಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮನೆ ಬಳಿ ಬೆಳಿಗ್ಗೆಯಿಂದ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗೃಹ ಸಚಿವರ ಮನೆ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆಯಲು ಮುಂದಾಗುತ್ತಿದ್ದಂತೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಇದೀಗ 40 ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಎಬಿವಿಪಿ ಕಾರ್ಯಕರ್ತರು ಪೊಲೀಸರನ್ನು ಲೆಕ್ಕಿಸದೇ ಗೃಹ ಸಚಿವರ ಮನೆಯ ಗೇಟ್ ಗಳನ್ನು ತಳ್ಳಿ ಒಳನುಗ್ಗಿದ್ದು, ಗೃಹ ಸಚಿವರ ಮನೆಯ ಬಾಗಿಲನ್ನು ತೆಗೆಯಲು ಯತ್ನಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಪರಿಸ್ಥಿತಿ ಇದ್ದುದರಿಂದ ಪ್ರಸ್ತುತ 40 ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕಮಿಷ್ನರ್ ಜತೆ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.