ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಚಿವ ಆನಂದ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಖಾಸಗಿ ಕಾರಿನಲ್ಲಿ ಆಗಮಿಸಿದ ಆನಂದ್ ಸಿಂಗ್, ಇದೀಗ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಸಚಿವರು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿಯಾಗಿರುವುದು ಇದೀಗ ಹೊಸ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಬಿಜೆಪಿಯ ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳುತ್ತಿದ್ದ ಬೆನ್ನಲ್ಲೇ ಬಿಜೆಪಿಯನ್ನು ಯಾರೂ ಕೂಡ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಸೇರಿದಂತೆ ಸಚಿವರುಗಳು ಹೇಳುತ್ತಿದ್ದರು. ಈ ಎಲ್ಲಾ ವಿಚಾರಗಳ ನಡುವೆ ಇದೀಗ ಆನಂದ್ ಸಿಂಗ್ – ಡಿ.ಕೆ. ಶಿವಕುಮಾರ್ ಭೇಟಿ ಅಚ್ಚರಿಗೆ ಕಾರಣವಾಗಿದೆ.
ಖಾತೆ ಹಂಚಿಕೆ ವಿಚಾರದಲ್ಲಿ ಹಾಗೂ ಉಸ್ತುವಾರಿ ಜಿಲ್ಲೆ ಹಂಚಿಕೆಯಲ್ಲಿಯೂ ಅಸಮಾಧಾನ ಹೊರಹಾಕಿದ್ದ ಆನಂದ್ ಸಿಂಗ್, ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿರುವುದು ಹೊಸ ರಾಜಕೀಯ ಸಂಚಲನಕ್ಕೆ ಕಾರಣವಾಗಲಿದೆಯೇ ಎಂಬ ಕುತೂಹಲ ಮೂಡಿದೆ.