ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಮಾರ್ಗ ಮಧ್ಯೆಯೇ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಆರಂಭವಾದ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿಯನ್ನು ಇಂಡಿಯನ್ ಎಕ್ಸ್ ಪ್ರೆಸ್ ಕಛೇರಿ ಬಳಿ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ತಡೆದಿದ್ದಾರೆ. ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಆದರೆ ಪೊಲೀಸರು ರಾಜಭವನದತ್ತ ಪ್ರತಿಭಟನಾಕಾರರು ತೆರಳದಂತೆ ತಡೆದಿದ್ದಾರೆ.
ಇಂಡಿಯನ್ ಎಕ್ಸ್ ಪ್ರೆಸ್ ಕಛೇರಿ ಬಳಿ ಪೊಲಿಸರು ತಡೆಯೊಡ್ಡುತ್ತಿದ್ದಂತೆ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ನಡು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಪೊಲೀಸರು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು, ಮಹಿಳಾ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.