ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರ ಬಹುಮತ ಕಳೆದುಕೊಳ್ಳುವುದು ಬಹುತೇಕ ನಿಶ್ಚಿತವಾಗಿದೆ. ಗೌಹಾತಿಯ ಪಂಚತರ ಹೋಟೆಲ್ನಲ್ಲಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರ ಸಂಖ್ಯೆ ಮತ್ತಷ್ಟು ಏರಿಕೆಯಾಗುತ್ತಿದೆ.
ಉದ್ಧವ್ ಠಾಕ್ರೆ ಸರ್ಕಾರ ಪತನಗೊಳ್ಳುವುದು ಖಚಿತ ಎಂಬುದರ ಅರಿವಾಗುತ್ತದೆ ಮತ್ತೆ ಮೂವರು ಶಾಸಕರು ಮುಂಬೈನಿಂದ ಗೌಹಾತಿಗೆ ತೆರಳಿದ್ದು, ಅಲ್ಲಿ ಏಕನಾಥ್ ಶಿಂಧೆ ಬಣದೊಂದಿಗೆ ಗುರುತಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಶಾಸಕರ ಬೆಂಬಲ ತಮಗೆ ಹೆಚ್ಚಿರುವ ಕಾರಣ ನಮ್ಮದೇ ನಿಜವಾದ ಶಿವಸೇನೆ ಎಂದು ಏಕನಾಥ್ ಶಿಂಧೆ ಬಣ ಹೇಳಿಕೊಳ್ಳುತ್ತಿದೆ.
ಇದರ ಮಧ್ಯೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂದು ಶಿವಸೇನೆಯ ಜಿಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪ್ರಮುಖ ನಾಯಕರ ಸಭೆ ಕರೆದಿದ್ದು, ಈ ಸಭೆಯಲ್ಲಿ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಪಕ್ಷ ಉಳಿಸಿಕೊಳ್ಳುವ ಅನಿವಾರ್ಯತೆಗೆ ಉದ್ಧವ್ ಠಾಕ್ರೆ ಸಿಲುಕಿದ್ದು, ಬಂಡಾಯ ಶಾಸಕರ ಬೇಡಿಕೆಯಂತೆ ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಮುಂದಾದರೂ ಅಚ್ಚರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.