ಬೆಂಗಳೂರು: ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ ಎಂದು ತಿಳಿದುಬಂದಿದೆ.
ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ಕುರಿತ ತಜ್ಞರು, ಸಚಿವರ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ತೆರವುಗೊಳಿಸುವಂತೆ ಸರ್ಕಾರಕ್ಕೆ ತಜ್ಞರು ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ತೆರವು ಮಾಡಲು ಸಿಎಂ ಸಮ್ಮತಿಸಿದ್ದಾರೆ.
ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿದ್ದು, ಜನವರಿ 31ರವರೆಗೆ ನೈಟ್ ಕರ್ಫ್ಯೂ ಮುಂದುವರೆಸುವ ಬಗ್ಗೆ ಹಾಗೂ ಕೆಲ ಕಠಿಣ ನಿಯಮಗಳನ್ನು ಜಾರಿಗೆ ತರುವಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕೋವಿಡ್ ಕೇಸ್ ವ್ಯಾಪಕವಾಗಿ ಹೆಚ್ಚುತ್ತಿದೆ. ಆದರೆ ತೀವ್ರತೆ ಕಡಿಮೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಬೆಂಗಳೂರಿಗೆ ಪ್ರತ್ಯೇಕ ಟಫ್ ರೂಲ್ಸ್ ಜಾರಿಗೊಳಿಸಲು ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಸಲಹೆ ನೀಡಿದ್ದಾರೆ. ಥಿಯೇಟರ್, ಮಾಲ್ ಗಳಲ್ಲಿ 50:50 ರೂಲ್ಸ್ ಜಾರಿಗೂ ಚರ್ಚೆ ನಡೆದಿದೆ.