ಬೆಂಗಳೂರು: ಸಧ್ಯಕ್ಕೆ ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಕೊರೊನಾ ಮೂರನೇ ಅಲೆ ನಿರ್ವಹಣೆ ನಿಟ್ಟಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಆತಂಕವಿರುವುದರಿಂದ ಮಕ್ಕಳ ಬಗ್ಗೆ ನಿಗಾ ವಹಿಸಬೇಕು. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಗಳಿಗೆ ಜನ ಸಂಚಾರಕ್ಕೆ ಕಡಿವಾಣ ಹಾಕಬೇಕು, ಶಾಲೆ-ಕಾಲೇಜುಗಳ ಆರಂಭದ ಬಗ್ಗೆ ಸೆಪ್ಟೆಂಬರ್ ವರೆಗೆ ಕಾದುನೋಡುವುದು ಉತ್ತಮ ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಸಧ್ಯಕ್ಕೆ ಲಾಕ್ ಡೌನ್ ನಂತಹ ಕಠಿಣ ಕ್ರಮ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೆ ತರಬಹುದು. ಮುಂದಿನ ಎರಡು ವಾರ ಈಗಿರುವ ನಿಯಮಗಳನ್ನೇ ಮುಂದುವರೆಸಿಕೊಂಡು ಹೋಗಬೇಕು. ಹಬ್ಬಗಳಲ್ಲಿ ಜನರು ಒಂದೆಡೆ ಸೇರದಂತೆ ಎಚ್ಚರಿಕೆ ವಹಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಲ್ಲದೇ ಹೊರ ರಾಜ್ಯಗಳಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿ, ಗ್ರಾಮೀಣ ಭಾಗಗಳಲ್ಲಿ ಹಾಗೂ ಗಡಿ ಜಿಲ್ಲೆಗಳಲ್ಲಿ ಟೆಸ್ಟಿಂಗ್ ಹಾಗೂ ವ್ಯಾಕ್ಸಿನೇಷನ್ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.