ಬೆಂಗಳೂರು; ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿ, ಸದನದಲ್ಲಿ ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಮಂಡಲ ಉಭಯ ಸದನಗಳ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಇಂದು ಬೆಳಿಗ್ಗೆ ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ಸಚಿವ ಈಶ್ವರಪ್ಪ ರಾಜೀನಾಮೆ ಪಡೆಯುವಂತೆ ಒತ್ತಾಯಿಸಿ ಘೋಷಣೆ ಕೂಗಲು ಆರಂಭಿಸಿದರು. ಗದ್ದಲ-ಕೋಲಾಹಲ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ 10 ನಿಮಿಷ ಕಾಲ ಕಲಾಪ ಮುಂದೂಡಿದ್ದರು. ಆದರೆ ಮತ್ತೆ ಕಲಾಪ ಆರಂಭವಾದಾಗಲೂ ಕಾಂಗ್ರೆಸ್ ಸದಸ್ಯರು ತಮ್ಮ ಪಟ್ಟು ಸಡಿಲಿಸದೇ ಕಲಾಪಕ್ಕೆ ಅಡ್ಡಿ ಪಡಿಸಿದ್ದಲ್ಲದೇ ಪರಿಷತ್ ಬಾವಿಗಿಳಿದು ಪ್ರತಿಭಟನೆ ಮುಂದುವರೆಸಿದರು. ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಿ ಆದೇಶ ಹೊರಡಿಸಿದರು.
ಈ ನಡುವೆ ವಿಧಾನಸಭೆಯಲ್ಲಿಯೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಮುಂದುವರೆಸಿದ್ದರು. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿ ರಾಷ್ಟ್ರದ್ರೋಹದ ಕೆಲಸ ಮಾಡಿದ್ದಾರೆ. ತಕ್ಷಣ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಬಿತ್ತಿ ಪತ್ರಗಳನ್ನು ಹಿಡಿದು ಸರ್ಕಾರ ಹಾಗೂ ಸಚಿವ ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿದ್ದಾರೆ.
ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಾಂಗ್ರೆಸ್ ಸದಸ್ಯರನ್ನು ಕರೆದು ಸಂಧಾನ ಸಭೆ ನಡೆಸಿದರು. ಸಭೆಯಲ್ಲಿ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ತಿಳಿಸಿದ್ದಾರೆ. ಅಲ್ಲದೇ ಅಹೋರಾತ್ರಿ ಧರಣಿಯನ್ನು ವಾಪಸ್ ಪಡೆಯುವಂತೆಯೂ ಮನವೊಲಿಕೆಗೆ ಯತ್ನಿಸಿದ್ದಾರೆ. ಆದರೆ ಸ್ಪೀಕರ್ ಮನವಿಗೂ ಒಪ್ಪದ ಕಾಂಗ್ರೆಸ್ ಸದಸ್ಯರು ಸಚಿವರು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ. ಸಂಧಾನ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಸ್ಪೀಕರ್ ಕಾಗೇರಿ ವಿಧಾನಸಭಾ ಕಲಾಪವನ್ನು ಕೂಡ ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.