ಬೆಂಗಳೂರು : ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದ್ದು, ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪಕ್ಷ, ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ, ಅವರು ಇಂದು ರಾಜೀನಾಮೆ ನೀಡಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಸಚಿವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿದೆ. ನಾನು ಗೃಹ ಸಚಿವರು ಸಚಿವ ನಾಗೇಂದ್ರ ಬಳಿ ಚರ್ಚೆ ಮಾಡಿದ್ದೇವೆ, ಅವರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಆದ್ದರಿಂದ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಈ ಬೆನ್ನಲ್ಲೇ ಸಚಿವರು ರಾಜೀನಾಮೆ ನೀಡಿದ್ದಾರೆ.
ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದಲ್ಲಿ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿತ್ತು.ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಇಂದು ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದೆ. ಪಾದಯಾತ್ರೆ ಬಳಿಕ ರಾಜಭವನಕ್ಕೆ ತೆರಳಿದ ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರರು ನಾಯಕರನ್ನೊಳಗೊಂಡ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ದೂರು ನೀಡಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿದ ಬೆನ್ನಲ್ಲೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಆದರೀಗ ಸಿಎಂ ನಾನು ಸಚಿವರ ಬಳಿ ರಾಜೀನಾಮೆ ಕೇಳಿಲ್ಲ, ಕರೆದು ಮಾತನಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.