ಭೋಪಾಲ್: ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸಿ ಆದೇಶ ಹೊರಡಿಸಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಮೂಲಗಳ ಪ್ರಕಾರ, ಅನಿಯಂತ್ರಿತ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದೆ. ನಿಯಮಿತ ಮತ್ತು ನಿಯಂತ್ರಿತ(ಅನುಮತಿಸಬಹುದಾದ ಡೆಸಿಬಲ್) ಬಳಕೆಗೆ ಯಾವುದೇ ನಿರ್ಬಂಧವಿಲ್ಲ.
ನಿಗದಿತ ಸಮಯದಲ್ಲಿ ಮಾತ್ರ ನಿಯಂತ್ರಿತ ಧ್ವನಿವರ್ಧಕಗಳು ನಿಗದಿತ ಡೆಸಿಬಲ್ ಮಿತಿಯಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಎಂದು ಆದೇಶದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಕಾನೂನು ಪ್ರಕಾರ ಕಾರ್ಯನಿರ್ವಹಿಸುವ ಧ್ವನಿವರ್ಧಕಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಜತೆಗೆ, ಬಹಿರಂಗವಾಗಿ ಮಾಂಸ ಮಾರಾಟ ಮಾಡದಂತೆಯೂ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಇದಕ್ಕೂ ಮುನ್ನ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ 58 ವರ್ಷದ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ರಾಜಧಾನಿ ಭೋಪಾಲ್‌ನ ಲಾಲ್ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಕೂಡ ಉಪಸ್ಥಿತರಿದ್ದರು.