ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರಲ್ಲಿ ಆಕ್ರೋಶ ಮಡುಗಟ್ಟಿದೆ.
ರಾಜ್ಯ ಹಾಗೂ ಕೇಂದ್ರದಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದರೂ ಸಹ ಹಿಂದೂಗಳ ಹತ್ಯೆ ಮಾಡಿದ ಆರೋಪಿಗಳ ವಿರುದ್ದ ಯಾವುದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಹಿಂದೂ ಕಾರ್ಯಕರ್ತನ ಹತ್ಯೆ ನಡೆದ ಸಂದರ್ಭದಲ್ಲಿ ಅಧಿಕಾರಸ್ಥರು ಕಠಿಣ ಕ್ರಮ ಎಂದು ಹೇಳುತ್ತಾರೆ ಹೊರತು ನಂತರ ಯಾವುದೇ ತೀರ್ಮಾ ಕೈಗೊಳ್ಳುವುದಿಲ್ಲ ಎಂಬ ಭಾವನೆ ಅವರುಗಳಲ್ಲಿ ಮೂಡಿದೆ.
ಇದಕ್ಕೆ ಪುಷ್ಟಿ ನೀಡುವಂತೆ ಚಿಕ್ಕಮಗಳೂರು ಬಿಜೆಪಿ ಯುವಮೋರ್ಚಾದ ಮೂವತ್ತಕ್ಕೂ ಅಧಿಕ ಪದಾಧಿಕಾರಿಗಳು ಈಗ ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿದ್ದ ಪ್ರವೀಣ್ ಅವರ ಹತ್ಯೆಗೆ ಈ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ಸಾಮೂಹಿಕ ರಾಜೀನಾಮೆ ನಿರ್ಧಾರ ಕೈಗೊಂಡು ಕಾರ್ಯಕರ್ತರಿಗೆ ರಕ್ಷಣೆ ನೀಡದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.