ರಾಜ್ಯದಲ್ಲಿ ಕೊರೊನಾ ಹಾಗೂ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿನ್ನೆಯಷ್ಟೇ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಅಂತರರಾಜ್ಯ ಗಡಿಯೂ ಬಂದ್ ಆಗಬಹುದು ಎಂಬ ವದಂತಿಗಳಿಗೆ ಪ್ರತಿಕ್ರಿಯೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಸದ್ಯ ಈ ಆಲೋಚನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದರು.
ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ಓಮಿಕ್ರಾನ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗೆಂದು ನಾವು ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಗಡಿಗಳನ್ನು ಬಂದ್ ಮಾಡುವ ಆಲೋಚನೆಯನ್ನು ಹೊಂದಿಲ್ಲ. ಆದರೆ ಅಂತರರಾಜ್ಯ ಗಡಿಗಳಿಂದ ರಾಜ್ಯಕ್ಕೆ ಎಂಟ್ರಿ ನೀಡುವವರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಹೇಳಿದರು.
ಅಂತರರಾಜ್ಯ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿದೆ. ಆದರೆ ರಾಜ್ಯದ ಗಡಿಗಳ ಮೇಲೆ ವಿಶೇಷ ನಿಗಾ ವಹಿಸಲಿದೆ. ಸೋಂಕಿತರು ಕಂಡು ಬಂದಲ್ಲಿ ಅಂತವರನ್ನು ರಾಜ್ಯದ ಪ್ರವೇಶಕ್ಕೆ ನಿರ್ಬಂಧಿಸಲಾಗುತ್ತದೆ ಎಂದು ಹೇಳಿದರು.
ಇನ್ನು ವೀಕೆಂಡ್ ಕರ್ಫ್ಯೂ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ಪ್ರಕರಣ ಹೆಚ್ಚುತ್ತಿರೋದನ್ನು ಗಮನದಲ್ಲಿಟ್ಟುಕೊಂಡು ಪರಿಸ್ಥಿತಿ ಕೈ ಮೀರಬಾರದೆಂದು ಈ ಎಲ್ಲಾ ನಿರ್ಧಾರಗಳನ್ನು ಮುಂಜಾಗ್ರತಾ ಕ್ರಮವಾಗಿ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿಯೂ ಪರಿಸ್ಥಿತಿ ನಿಯಂತ್ರಣಕ್ಕೆಂದೇ ಶಾಲಾ – ಕಾಲೇಜುಗಳನ್ನು ಮುಚ್ಚಿದ್ದೇವೆ. ಮಕ್ಕಳಿಗೂ ಲಸಿಕೆ ಆರಂಭವಾಗಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.