ಚಿಕ್ಕಮಗಳೂರು: ಅನ್ನಭಾಗ್ಯ ಯೋಜನೆಗಾಗಿ ಉಚಿತ ಅಕ್ಕಿ ವಿತರಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪಗಳು ಮುಂದುವರೆದಿವೆ. ಅಕ್ಕಿಗಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಬಳಿ ಬೇಡಿಕೆಯೇ ಇಟ್ಟಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ.
ಅಕ್ಕಿ ವಿಚಾರವಾಗಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ. ತನ್ನ ವೈಫಲ್ಯ ಮುಚ್ಚಿಕೊಳ್ಳಲು ಪ್ರಧಾನಿ ಮೋದಿಯವರನ್ನು ಎಳೆದು ತರಲು ಹರಸಾಹಸ ಪಡುತ್ತಿದೆ ಎಂದು ಸಿ.ಟಿ. ರವಿ ಕಿಡಿ ಕಾರಿದ್ದಾರೆ.
ರಾಜ್ಯದ ಸಿಎಂ ಅಕ್ಕಿಗೆ ಸಂಬಂಧಿಸಿದಂತೆ ಕೇಂದ್ರದ ಬಳಿ ಬೇಡಿಕೆ ಇಟ್ಟಿಲ್ಲ. ಸೌಜನ್ಯಕ್ಕಾದರೂ ಪ್ರಧಾನಿ, ಕೇಂದ್ರ ಆಹಾರ ಸಚಿವರ ಬಳಿ ಬೇಡಿಕೆ ಇಟ್ಟಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಅನಗತ್ಯ ಆರೋಪ ಮಾಡುತ್ತಿರುವುದು ರಾಜಕೀಯ ದುರುದ್ದೇಶಪೂರಿತ ಎಂದು ವಾಗ್ದಾಳಿ ನಡೆಸಿದ್ದಾರೆ.