ಪ್ರಸ್ತುತ ಲೋಕಸಭಾ ಅಧಿವೇಶನ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಸಂಸದರೂ ಆಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರುಗಳ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ನಡೆಸಿತ್ತು.
ಅಲ್ಲದೆ ಭೂ ಹಗರಣದಲ್ಲಿ ಶಿವಸೇನೆ ಸಂಸದ ಸಂಜಯ್ ರಾವತ್ ಅವರನ್ನು ಬಂಧಿಸಲಾಗಿದ್ದು, ಈ ವಿಚಾರ ಸಂಸತ್ತಿನಲ್ಲಿ ಪ್ರಸ್ತಾಪವಾಗಿ ಪ್ರತಿಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ರಾಜ್ಯಸಭೆ ಅಧ್ಯಕ್ಷರಾಗಿರುವ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಈ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ.
ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಸತ್ ಸದಸ್ಯರನ್ನು ಸದನಗಳ ಕಲಾಪ ನಡೆಯುತ್ತಿರುವ ಸಂದರ್ಭದಲ್ಲೂ ಬಂಧಿಸಬಹುದು ಎಂದು ವೆಂಕಯ್ಯ ನಾಯ್ಡು ಅವರು ತಿಳಿಸಿದ್ದು, ಅಲ್ಲದೆ ಕಾನೂನು ಜಾರಿ ಸಂಸ್ಥೆಗಳು ನೀಡುವ ಸಮನ್ಸ್ ಗಳಿಂದ ಅವರು ತಪ್ಪಿಸಿಕೊಳ್ಳುವಂತಿಲ್ಲ ಎಂದು ಹೇಳಿದ್ದಾರೆ.