ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಮಂಗಳವಾರ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು.
ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ಸಭೆ ನಡೆದಿದ್ದು, ಆದರೆ ಕೆಲವೊಂದು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನಾಯಕರ ನಡುವೆ ಒಮ್ಮತ ಮೂಡದ ಕಾರಣ ಪಟ್ಟಿ ಬಿಡುಗಡೆ ನೆನೆಗುದಿಗೆ ಬಿದ್ದಿದೆ ಎಂದು ತಿಳಿದುಬಂದಿದೆ.
ಹೆಚ್ಚು ಪೈಪೋಟಿ ಇಲ್ಲದ 49 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರಿಗೆ ಎಲ್ಲ ನಾಯಕರು ತಮ್ಮ ಒಪ್ಪಿಗೆ ಸೂಚಿಸಿದ್ದು, ಆದರೆ ಇನ್ನಿತರ ಕ್ಷೇತ್ರಗಳಲ್ಲಿ ತಮ್ಮವರಿಗೆ ಟಿಕೆಟ್ ನೀಡಬೇಕೆಂದು ಪ್ರತಿಪಾದಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಎರಡನೇ ಪಟ್ಟಿ ಬಿಡುಗಡೆ ಮಾಡಲು ವಿಳಂಬವಾಗಿದ್ದು, ಬಹುತೇಕ ಇಂದು ಪ್ರಕಟವಾಗುವ ನಿರೀಕ್ಷೆ ಇದೆ.