ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನಿಗೆ ಫುಲ್ ರಿಲೀಫ್ ಸಿಕ್ಕಿದ್ದು, ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ನ್ಯಾಯಾಲಯ ಮಾನ್ಯ ಮಾಡಿದೆ.
2018ರಲ್ಲಿ ನಟಿ ಶ್ರುತಿ ಹರಿಹರನ್, ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದರು. ಸಿನಿಮಾ ಚಿತ್ರೀಕರಣದ ವೇಳೆ ತನಗೆ ನಟ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಈ ಕುರಿತು ಶ್ರುತಿ ಹರಿಹರನ್ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಮೂರು ವರ್ಷಗಳ ಕಾಲ ತನಿಖೆ ನಡೆಸಿದ ಪೊಲೀಸರು ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷ್ಯಗಳ ಕೊರತೆ ಹಿನ್ನೆಲೆಯಲ್ಲಿ ಪ್ರಕರಣ ಇತ್ಯರ್ಥ ಬಗ್ಗೆ ನ.29ರಂದು ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ವರದಿಗೆ ನಟಿ ಶ್ರುತಿ ಹರಿಹರನ್ ಆಕ್ಷೇಪಣೆ ಸಲ್ಲಿಸದ ಹಿನ್ನೆಲೆಯಲ್ಲಿ ಇದೀಗ 8ನೇ ಎಸಿಎಂಎಂ ನ್ಯಾಯಾಲಯ ಬಿ ರಿಪೋರ್ಟ್ ವರದಿ ಮಾನ್ಯ ಮಾಡಿದೆ. ಪ್ರಕರಣದಲ್ಲಿ ನಟ ಅರ್ಜುನ್ ಸರ್ಜಾ ಅವರಿಗೆ ರಿಲೀಫ್ ಸಿಕ್ಕಿದೆ.