ಬೆಂಗಳೂರು: ಗೃಹ ಸಚಿವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಅಲ್ಲಿಯವರೆಗೂ ಪೊಲೀಸರು ಏನು ಮಾಡುತ್ತಿದ್ದರು? ಎಂದು ಕಾಂಗ್ರೆಸ್ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಸಾಲು ಸಾಲು ಹತ್ಯೆ ಪ್ರಕರಣ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮಂಗಳೂರಿನಲ್ಲಿ ಗೃಹ ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷರನ್ನೇ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದೀಗ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಮುತ್ತಿಗೆ ಹಾಕುವವರೆಗೂ ಪೊಲೀಸರು ಏನು ಮಾಡುತ್ತಿದ್ದರು? ಇಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ಇಲ್ಲ. ರಾಜ್ಯದಲ್ಲಿ ಇಂಟಲಿಜೆನ್ಸ್ ಕತ್ತೆ ಕಾಯುತ್ತಿದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಪರಿಸ್ಥಿತಿ ಕೈ ಮೀರಲು ಬಿಜೆಪಿಯ ತತ್ವ ಸಿದ್ಧಾಂತಗಳೇ ಕಾರಣ. ಪಕ್ಷದ ಕಾರ್ಯಕರ್ತರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಲು ಸಾಲು ಹತ್ಯೆ ಪ್ರಕರಣಗಳು ನಡೆಯುತ್ತಿದ್ದರೂ ಈವರೆಗೂ ಆರೋಪಿಗಳನ್ನು ಬಂಧಿಸಲಾಗುತ್ತಿಲ್ಲ. ಕಠಿಣ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಜನರ ರಕ್ಷಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸಿಎಂ ಹಾಗೂ ಗೃಹ ಸಚಿವರು ಮೊದಲು ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.