ಬೆಂಗಳೂರು: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಬಿಜೆಪಿ ಪರ್ಯಾಯ ಯಾತ್ರೆ ಆರಂಭಿಸಿದ್ದು, ಇಂದಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗಲಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಇಂದಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗಲಿದೆ. ಜನಸಂಕಲ್ಪ ಯಾತ್ರೆ ಮೂಲಕ ಜನರ ವಿಶ್ವಾಸಗಳಿಸಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.
ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡಲಾಗುವುದು. ಸರ್ಕಾರದ ಜನಪರ ಕಾರ್ಯಗಳನ್ನು ಜನರಿಗೆ ತಲುಪಿಸಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯಾತ್ರೆ ಆರಂಭವಾಗಲಿದೆ ಎಂದರು.
ಇದೇ ವೇಳೆ ಓಲಾ, ಊಬರ್ ಕ್ಯಾಬ್ ಸಮಸ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆಯೇ ಸಾರಿಗೆ ಆಯುಕ್ತರನ್ನು ಕರೆದು ಚರ್ಚೆ ನಡೆಸಲಾಗಿದೆ. ಅನುಮತಿಯಿಲ್ಲದೇ ಯಾವುದೇ ಸಂಸ್ಥೆ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳಲಾಗುವುದು. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧವೂ ಕ್ರಮಕ್ಕೆ ಸಾರಿಗೆ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.