ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದು, ಇಂದು ಸಂಜೆಯೇ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ.
ದೆಹಲಿಯಲ್ಲಿ ಇಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಹೆಸರು ಫೈನಲ್ ಆಗಲಿದೆ. ಈ ಹಿನ್ನೆಲೆಯಲ್ಲಿ ಇಂದೇ ಅಭ್ಯರ್ಥಿಗಳ ಹೆಸರು ಘೋಷಣೆಯಾದರೂ ಅಚ್ಚರಿಯಿಲ್ಲ.
ಈ ಮಧ್ಯೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಒತ್ತಡವೂ ಇಲ್ಲ. ಯಾರೆಲ್ಲ ಅಭ್ಯರ್ಥಿಗಳು ಶ್ರಮಿಸಿದ್ದಾರೆ ಎಂಬುದು ಗೊತ್ತಿದೆ. ಕಳೆದ ಮೂರು ವರ್ಷಗಳಿಂದ ಅಭ್ಯರ್ಥಿಗಳ ಶ್ರಮದ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದೇವೆ. ಸಿಇಸಿ ಜತೆ 5-6 ಬಾರಿ ಸಭೆ ನಡೆಸಿದ್ದೇವೆ. 8-10 ಬಾರಿ ಸರ್ವೆ ಆಗಿದೆ. ಈ ಎಲ್ಲದರ ಬಗ್ಗೆಯೂ ಕಾಂಗ್ರೆಸ್ ಕೇಂದ್ರ ಚುನಾವಣೆ ಸಮಿತಿಯಲ್ಲಿ ಚರ್ಚೆಯಾಗಲಿದೆ. ಮಧ್ಯಾಹ್ನ ಮೂರು ಗಂಟೆಗೆ ಸಮಿತಿ ನಾಯಕರ ಜೊತೆ ಚರ್ಚಿಸುತ್ತೇವೆ ಎಂದರು.
ಗೆಲ್ಲುವ ಅವಕಾಶ ಇರುವ ಕಡೆ ಯುವಕರು, ಮಹಿಳೆಯರಿಗೂ ಟಿಕೆಟ್ ನಿಡಲಾಗುತ್ತಿದೆ. ಬಹುತೇಕ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.