ವಿಧಾನ ಪರಿಷತ್ತಿನ ಸಭಾಪತಿಯಾಗಿ ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡು ಪರಿಷತ್ ಚುನಾವಣೆಯಲ್ಲಿ ಗೆದ್ದಿದ್ದ ಬಸವರಾಜ ಹೊರಟ್ಟಿ ಅವರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿತ್ತಲ್ಲದೆ ಸೆಪ್ಟೆಂಬರ್ 21ರಂದು ಚುನಾವಣೆ ನಡೆಸಲು ರಾಜ್ಯಪಾಲರಿಗೆ ಪ್ರಸ್ತಾವನೆ ಕಳಿಸಲು ನಿರ್ಧರಿಸಲಾಗಿತ್ತು.
ಈ ಹಿಂದೆ ಜೆಡಿಎಸ್ ಸದಸ್ಯರಾಗಿದ್ದ ಬಸವರಾಜ ಹೊರಟ್ಟಿ ಬಿಜೆಪಿ ಬೆಂಬಲದೊಂದಿಗೆ ಸಭಾಪತಿಯಾಗಿ ಆಯ್ಕೆಯಾಗಿದ್ದರು. ಜೆಡಿಎಸ್ ತೊರೆಯುವ ಸಂದರ್ಭದಲ್ಲಿ ಸಭಾಪತಿ ಸ್ಥಾನದ ಭರವಸೆ ನೀಡಿಯೇ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು ಎಂದು ಹೇಳಲಾಗಿದೆ.
ಇದೀಗ ವಿಧಾನಪರಿಷತ್ ನಲ್ಲಿ ಬಿಜೆಪಿಗೆ ಬಹುಮತವಿದ್ದು, ಸ್ವಂತ ಬಲದ ಮೇಲೆ ಸಭಾಪತಿಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಹೀಗಾಗಿ ಬಸವರಾಜ ಹೊರಟ್ಟಿ ಅವರ ಆಯ್ಕೆಗೆ ಮುಂದಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆಪ್ಟೆಂಬರ್ 21ರಂದು ಚುನಾವಣೆ ನಡೆಸುವಂತೆ ಕೋರಿ ರಾಜ್ಯಪಾಲರಿಗೆ ಪ್ರಸ್ತಾವನೆ ಕಳಿಸಲು ಮುಂದಾಗಿದ್ದರು.
ಆದರೆ ಈ ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಹಿರಿಯ ಸದಸ್ಯರು ಅಸಮಾಧಾನಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಹಲವು ವರ್ಷಗಳಿಂದ ಪಕ್ಷದಲ್ಲಿರುವ ನಿಷ್ಠಾವಂತರನ್ನು ಈ ಸ್ಥಾನಕ್ಕೆ ಪರಿಗಣಿಸಬೇಕೆಂದು ಒತ್ತಡ ಹೇರಿದ್ದಾರೆ ಎನ್ನಲಾಗಿದೆ.
ಇದರಿಂದ ವಿಚಲಿತಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದ್ಯಕ್ಕೆ ವಿಧಾನ ಪರಿಷತ್ ಸಭಾಪತಿ ಸ್ಥಾನದ ಚುನಾವಣೆ ನಡೆಸದಿರುವ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ. ಆದರೆ ಇದು ಈಗ ಬಸವರಾಜ ಹೊರಟ್ಟಿ ಅವರ ಅಸಮಾಧಾನಕ್ಕೆ ಕಾರಣವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.