ಬಾದಾಮಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಭಾರತದ ಪ್ರಜಾಪ್ರಭುತ್ವದಲ್ಲಿ ಕರಾಳ ದಿನ ಎಂದು ಗುಡುಗಿದ್ದಾರೆ.
ಬಿಜೆಪಿಯ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ದ ಕಾನೂನು ಹೋರಾಟ ಮಾಡಲಾಗುವುದು. ದೇಶಾದ್ಯಂತ ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.
ದೇಶದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್ ಡಿ ಎ ಸರ್ಕಾರದ ವಿರುದ್ದ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದು ಕೇವಲ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ದ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷಾತೀತವಾಗಿ ಜಾತಿ ಮತ ಪಂಥ ಮರೆತು ಎಲ್ಲರೂ ಒಟ್ಟಾಗಿ ಈ ಅನ್ಯಾಯವನ್ನು ಪ್ರತಿಭಟಿಸಬೇಕು ಎಂದು ಕರೆ ನೀಡಿದ್ದಾರೆ.