ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಪಾಲಿಕೆ ಅನುಮತಿ ನೀಡಿದ್ದು ತಪ್ಪು. ಯಾವ ಕಾರಣಕ್ಕೂ ಟಿಪ್ಪು ಜಯಂತಿ ಆಚರಿಸಲು ನಾವು ಬಿಡುವುದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಪ್ರಮೋದ್ ಮುತಾಲಿಕ್, ಟಿಪ್ಪು ಓರ್ವ ದ್ರೋಹಿ, ಮತಾಂಧ, ಆತ ಕನ್ನಡಿಗರ ವಿರೋಧಿ. ಅಂತವನ ಜಯಂತಿ ಆಚರಣೆಗೆ ನಾವು ಅವಕಾಶ ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸಲು ಅವಕಾಶ ಕೊಡಲಾಗಿದೆ ಎಂದು ಟಿಪ್ಪು ಜಯಂತಿ ಆಚರಣೆ ಮಾಡಲು ಹುಬ್ಬಳ್ಳಿ ಮಹಾನಗರ ಪಾಲಿಕೆ ಅವಕಾಶ ನೀಡಿದ್ದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಹಾಗೂ ಪಾಲಿಕೆ ಕ್ರಮ ಖಂಡಿಸಿ ಚೆನ್ನಮ್ಮ ವೃತ್ತದಲ್ಲಿ ಶ್ರೀರಾಮಸೇನೆ ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.