
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಪರಾಭವಗೊಂಡಿದ್ದರು. ಅಂದು ಮುಖ್ಯಮಂತ್ರಿಯಾಗಿದ್ದರೂ ಸಹ ಕುಮಾರಸ್ವಾಮಿಯವರಿಗೆ ತಮ್ಮ ಪುತ್ರನನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.
ಇದೀಗ ಕೆಲ ತಿಂಗಳಿನಲ್ಲಿಯೇ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದು, ಎಚ್.ಡಿ. ಕುಮಾರಸ್ವಾಮಿ ಅವರು ಸಹ ಇದನ್ನು ಖಚಿತಪಡಿಸಿದ್ದರು. ಇದೀಗ ನಿಖಿಲ್ ಕುಮಾರಸ್ವಾಮಿಯವರಿಗೆ ಕ್ಷೇತ್ರವೂ ನಿಗದಿಯಾಗಿದೆ ಎನ್ನಲಾಗಿದ್ದು, ಪ್ರಸ್ತುತ ಜೆಡಿಎಸ್ ನಿಂದು ಮದ್ದೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಡಿ.ಸಿ. ತಮ್ಮಣ್ಣ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯವರಿಗೆ ಕ್ಷೇತ್ರವನ್ನು ಬಿಟ್ಟು ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪ್ರಭಾವ ಹೊಂದಿದ್ದು, ಹೀಗಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ನಿಖಿಲ್ ಅವರಿಗಾಗಿ ಕ್ಷೇತ್ರವನ್ನು ತ್ಯಾಗ ಮಾಡಲಿರುವ ಡಿ.ಸಿ. ತಮ್ಮಣ್ಣ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನಾಗಿ ಮಂಡ್ಯದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ.