ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ಅನರ್ಹತೆ ಬಗ್ಗೆ ತುರ್ತು ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿರುವ ಅರ್ಜಿಗಳ ತುರ್ತು ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಬಂಡಾಯ ಶಾಸಕರನ್ನು ಸರ್ಕಾರ ರಚನೆಗೆ ಆಹ್ವಾನಿಸಿರುವ ಮಹಾರಾಷ್ಟ್ರ ರಾಜ್ಯಪಾಲರ ನಿರ್ಧಾರವನ್ನು ಸಮರ್ಥಿಸಿದೆ.
ಪ್ರಕರಣದ ವಿಚಾರಣೆ ಶೀಘ್ರದಲ್ಲಿ ನಡೆಸಲಾಗದು, ಸ್ವಲ್ಪ ಸಮಯಾವಕಾಶ ಬೇಕು. ಅಲ್ಲದೇ 16 ಬಂಡಾಯ ಶಿವಸೇನೆ ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಮಹಾರಾಷ್ಟ್ರ ಸ್ಪೀಕರ್ ಗೆ ಸೂಚಿಸುವಂತೆ ಸಾಲಿಸಿಟರ್ ಜನರಲ್ ಗೆ ಸುಪ್ರೀಂ ಕೋರ್ಟ್ ತಿಳಿಸಿದೆ. ಈ ಮೂಲಕ ಏಕನಾಥ್ ಶಿಂಧೆ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.