ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕರಿಸಿದ್ದಾರೆ.
ನವದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆ ಅಡಿ ಹೊಸ ಅಧ್ಯಕ್ಷರ ಆಯ್ಕೆಯಾಗಿದೆ ಎಂದರು.
ಈ ವೇಳೆ ಮಾತನಾಡಿದ ಖರ್ಗೆ, ಎಐಸಿಸಿ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು. ನನ್ನ ಪಾಲಿಗೆ ಇಂದು ಭಾವುಕ ಕ್ಷಣಗಳು. ಸಾಮಾನ್ಯ ಕಾರ್ಯಕರ್ತನಿಗೆ ಅಧ್ಯಕ್ಷ ಪಟ್ಟ ಒಲಿದಿದೆ. ಕಾಂಗ್ರೆಸ್ ಅಧ್ಯಕ್ಷನಾಗಿರುವುದು ನನಗೆ ಹೆಮ್ಮೆಯ ಸಂಗತಿ ಎಂದರು.
ನಾವೆಲ್ಲರೂ ಸೇರಿ ಪಕ್ಷವನ್ನು ಬಲಿಷ್ಠಗೊಳಿಸೋಣ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲಾ ರೀತಿ ಹೋರಾಟಕ್ಕೆ ನಾನು ಸಿದ್ಧ. ಸುಳ್ಳು ದ್ವೇಷದ ತಂತ್ರವನ್ನು ಮೆಟ್ಟಿ ನಿಲ್ಲೋಣ ಎಂದು ಕರೆ ನೀಡಿದರು.