ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರದಲ್ಲಿ ಈಗಾಗಲೇ ಟಿಕೆಟ್ ಘೋಷಣೆಯಾಗಿದೆ. ಇದರ ಮಧ್ಯೆ ಕೋಲಾರದಿಂದಲೂ ಸ್ಪರ್ಧಿಸಲು ಸಿದ್ದರಾಮಯ್ಯನವರು ಇಂಗಿತ ವ್ಯಕ್ತಪಡಿಸಿದ್ದು, ಆದರೆ ಹೈಕಮಾಂಡ್ ಒಪ್ಪಿಗೆ ಬಳಿಕವೇ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
ಮಂಗಳವಾರದಂದು ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಎರಡು ಕ್ಷೇತ್ರಗಳಿಂದ ಸಿದ್ದರಾಮಯ್ಯನವರು ಸ್ಪರ್ಧಿಸಲು ಇತರೆ ನಾಯಕರು ತಮ್ಮ ಅಸಮ್ಮತಿ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ. ಸಿದ್ದರಾಮಯ್ಯನವರು ಎರಡು ಕ್ಷೇತ್ರಗಳಿಂದ ಕಣಕ್ಕಿಳಿದರೆ ಇತರೆ ನಾಯಕರು ಸಹ ಇದನ್ನೇ ನಿರೀಕ್ಷಿಸಬಹುದು ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗಿದೆ ಎನ್ನಲಾಗಿದೆ.
ವರುಣಾ ಕ್ಷೇತ್ರಕ್ಕೆ ಈಗಾಗಲೇ ಸಿದ್ದರಾಮಯ್ಯನವರ ಹೆಸರು ಘೋಷಣೆಯಾಗಿದ್ದು ಹೀಗಾಗಿ ಅಲ್ಲಿಂದಲೇ ಸ್ಪರ್ಧಿಸುವುದು ಸೂಕ್ತ ಎಂಬ ಅಭಿಪ್ರಾಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ಹೇಳಲಾಗಿದ್ದು, ಅಂತಿಮವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಾವು ಕೋಲಾರದಿಂದಲೂ ಕಣಕ್ಕಿಳಿದರೆ ಆ ಜಿಲ್ಲೆಯ ಇತರೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯವನ್ನು ಸಿದ್ದರಾಮಯ್ಯ ಹೊಂದಿದ್ದಾರೆ ಎಂದು ಹೇಳಲಾಗಿದೆ.