ಬಾಗಲಕೋಟೆ: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿಯೂ ಎರಡು ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸ್ವತಃ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಈಗಾಗಲೇ ಅವರೇ ಹೇಳಿದ್ದಾರೆ. ಸಿದ್ದರಾಮಯ್ಯನವರು ಹಾಕಿರುವುದು ಒಂದೇ ಅರ್ಜಿ. ಹಾಗಾಗಿ ಅಂತಿಮವಾಗಿ ಈ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ನಾನು ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದಿದ್ದೇನೆ. ಈ ಬಗ್ಗೆ ತುಂಬಾ ಕ್ಲೀಯರ್ ಆಗಿಯೇ ಹೇಳಿದ್ದೇನೆ ಎಂದರು. ಹೈಕಮಾಂಡ್ ಯಾವ ಕ್ಷೇತ್ರ ಸೂಚಿಸಲಿದೆ ಆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.