ಬೆಂಗಳೂರು: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಈ ಮೂಲಕ ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಮಂತ್ರಿ ಸ್ಥಾನದ ನಿರೀಕ್ಷೆ ಗರಿಗೆದರಿದೆ.
ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದು, ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಇನ್ನು 2-3 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ ಎಂದರು.
ಇಂದು ನಡೆಯಲಿರುವ ಬಿಜೆಪಿ ಸಭೆಯಲ್ಲಿಯೇ ಅಮಿತ್ ಶಾ ಅವರು ಸಂಪುಟ ವಿಸ್ತರಣೆಗೆ ಸಮ್ಮತಿ ನೀಡುತ್ತಾರೋ ಅಥವಾ ದೆಹಲಿಗೆ ತೆರಳಿದ ಬಳಿಕ ಪ್ರಧಾನಿ ಮೋದಿಯವರೊಂದಿಗೆ ಮತ್ತೊಮ್ಮೆ ಚರ್ಚಿಸಿ ಅನುಮತಿ ನೀಡುತ್ತಾರೋ ಗೊತ್ತಿಲ್ಲ. ಆದರೆ ಎರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ ಎಂದರು.
ಇನ್ನು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಬಿ ಎಸ್ ವೈ, ಸಿಎಂ ಬದಲಾವಣೆ ವಿಚಾರವೇ ಇಲ್ಲ. ಇಂತದ್ದೊಂದು ಚರ್ಚೆ ಕೇವಲ ಊಹಾಪೋಹ ಎಂದು ಸ್ಪಷ್ಟಪಡಿಸಿದರು.