ಮೈಸೂರು: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಧ್ಯೆ ರಾಜಕೀಯ ನಾಯಕರು ಟೆಂಪಲ್ ರನ್ ಆರಂಭಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಒಟ್ಟಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗು ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿ ಪ್ರತಿಯನ್ನು ಇಟ್ಟು ಚಾಮುಂಡಿ ದೇವಿಗೆ ವಿಶೇಷ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದರು.
ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಇಬ್ಬರು ನಾಯಕರು ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದೆ. ಇದೇ ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೆ ಪಕ್ಷ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಪ್ರಮಾಣ ಮಾಡಿದೆವು.
ಇತರರ ಅಪಪ್ರಚಾರಗಳಿಗೆ ಕಿವಿಗೊಡಬೇಡಿ, ನಾಡಿನ ಪ್ರತಿಯೊಬ್ಬರೂ ನಮ್ಮಲ್ಲಿ ಪೂರ್ಣ ವಿಶ್ವಾಸವಿಡಿ ನಮ್ಮ ಗ್ಯಾರಂಟಿಗಳನ್ನು ನೂರಕ್ಕೆ ನೂರು ಜಾರಿಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.