ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರಗತಿಯ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೇ ರಾಜ್ಯ ಸರ್ಕಾರ ಅವಮಾನ ಮಾಡಿದೆ ಎಂದು ಜೆಡಿಎಸ್ ಕಿಡಿಕಾರಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಸ್ವತ: ಸಿಎಂ ಕರೆ ಮಾಡಿ ಆಹ್ವಾನಿಸಿದ್ದರು. ಆಹ್ವಾನ ಪತ್ರಿಕೆಯನ್ನೂ ನೀಡಲಾಗಿತ್ತು ಎಂದು ಸಮರ್ಥಿಸಿಕೊಂಡಿದೆ. ಬಿಜೆಪಿ ಸಮರ್ಥನೆಗೆ ಮತ್ತೆ ಕಿಡಿಕಾರಿರುವ ಜೆಡಿಎಸ್ ಇದು ಕಾಟಾಚಾರದ ಕರೆಯೋಲೆ ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದೆ.
ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? ಎಂದು ಪ್ರಶ್ನಿಸಿದೆ.
ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?
ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎಂದು ಜೆಡಿಎಸ್ ಆಹ್ವಾನ ಪತ್ರಿಕೆಯನ್ನು ಲಗತ್ತಿಸಿದೆ. ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.