ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕದ ವಿರುದ್ಧ ನಿರ್ಣಯವನ್ನು ಮಂಡಿಸಿದೆ. ಮಹಾರಾಷ್ಟ್ರದ ನಿರ್ಧಾರವನ್ನು ನಾವು ಖಂಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿ, ಭಾಲ್ಕಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಿಸುವಂತೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸಿಎಂ ಏಕನಾಥ್ ಶಿಂಧೆ ನಿರ್ಣಯ ಮಂಡಿಸಿದ್ದಾರೆ. ಈ ವಿಚಾರವಾಗಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕರ್ನಾಟಕದ ವಿರುದ್ಧವಾಗಿ ಮಹಾ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ.
ಕೇಂದ್ರದಲ್ಲಿ, ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಇದೆ. ಕರ್ನಾಟಕದ ವಿರುದ್ಧವಾಗಿ ನಿರ್ಣಯ ಮಂಡಿಸುವಂತೆ ಬಿಜೆಪಿಯವರೇ ಕುಮ್ಮಕ್ಕು ನೀಡುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಈ ರೀತಿ ಕುತಂತ್ರ ಮಾಡುತ್ತಿದ್ದಾರೆ. ಬೆಳಗಾವಿ ರಾಜಕಾರಣದಲ್ಲಿ ವ್ಯತ್ಯಾಸವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿಯ ಒಂದಿಂಚು ಜಾಗವನ್ನು ಕೂಡ ಬಿಟ್ಟುಕೊಡುವ ಮಾತೇ ಇಲ್ಲ, ನಮ್ಮ ನೆಲ, ಜಲ, ಭಾಷೆ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಈ ವಿಚಾರವಾಗಿ ಕನ್ನಡಪರ ಸಂಘಟನೆಗಳು, ಕನ್ನಡಿಗರು ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಯಾವುದೇ ಕಾರಣಕ್ಕೂ ರಾಜಿ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.