ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ಯೋಜನೆ ನಮ್ಮ ನೆಲದಲ್ಲಿ ಜಾರಿಗೆ ಅವಕಾಶ ನೀಡುವುದಿಲ್ಲ, ನಮ್ಮ ನಾಡಿನ ಗಡಿ ಭಾಗದ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯದ 865 ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಹಲವು ಯೋಜನೆ ಜಾರಿಗೆ ಅನುದಾನ ಬಿಡುಗಡೆ ಮಾಡಿದೆ. ಕರ್ನಾಟಕದ 865 ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಜಾರಿಗೆ ಮಹಾಸರ್ಕಾರ ಮುಂದಾಗಿದ್ದು, ಆ ಮೂಲಕ ಕರ್ನಾಟಕ ರಾಜ್ಯಕ್ಕೆ ಅವಮಾನ ಮಾಡಿದೆ. ನಮ್ಮ ಪ್ರಾಣ ಹೋದರೂ ಸರಿ ನಮ್ಮ ನೆಲ, ಜಲ, ಭಾಷೆ ರಕ್ಷಣೆ ಮಾಡಿಕೊಳ್ಳುತ್ತೇವೆ. ಅವರ ಯೋಜನೆ ನಮ್ಮ ನೆಲದಲ್ಲಿ ಜಾರಿಗೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ. ನಮ್ಮ ನೆಲದಲ್ಲಿ, ನಮ್ಮ ಜನರ ಆರೋಗ್ಯ ರಕ್ಷಿಸಲು ನಮಗೆ ತಾಕತ್ತು ಇಲ್ಲವೇ ? ನಮ್ಮ ನೆಲದಲ್ಲಿ ಯೋಜನೆ ಜಾರಿ ಮಾಡಲು ಮಹಾರಾಷ್ಟ್ರ ಸರಕಾರಕ್ಕೆ ಅನುಮತಿ ಕೊಟ್ಟವರು ಯಾರು ? ನಮ್ಮ ಜನರ ಅರೋಗ್ಯ ರಕ್ಷಣೆ ಮಾಡಲು ರಾಜ್ಯ ಬಿಜೆಪಿ ಸರಕಾರದ ಬಳಿ ಹಣ ಇಲ್ಲವೇ ? ಸರಕಾರವೇನಾದರೂ ದಿವಾಳಿ ಆಗಿದೆಯೇ ನಮ್ಮ ರಾಜ್ಯದಲ್ಲಿ ಬೇರೆ ರಾಜ್ಯದವರು ಯೋಜನೆ ಜಾರಿ ಮಾಡಲು ಹೇಗೆ ಸಾಧ್ಯ ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಸರ್ಕಾರ ರಾಜಕೀಯ ಕಾರಣಗಳಿಗೆ ಕನ್ನಡಿಗರ ಹಿತಾಸಕ್ತಿ ಬಲಿ ಕೊಡಲು ಮುಂದಾಗಿದೆ. ಕನ್ನಡಿಗರ ಸ್ವಾಭಿಮಾನ, ಮರ್ಯಾದೆ ಹರಾಜು ಹಾಕುತ್ತಿದೆ. ನಮ್ಮ ನೆಲದಲ್ಲಿ ಮಹಾರಾಷ್ಟ್ರ ಸರ್ಕಾರ ಯೋಜನೆ ಜಾರಿಗೆ ಮುಂದಾಗಿದ್ದರೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಣ್ಣುಮುಚ್ಚಿ ಕುಳಿತಿರುವುದು ರಾಜ್ಯ ಬಿಜೆಪಿ ಸರ್ಕಾರದ ದೌರ್ಬಲ್ಯಕ್ಕೆ ಸಾಕ್ಷಿ. ಸಿಎಂ ಬೊಮ್ಮಾಯಿ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಸರ್ಕಾರ ವಿಸರ್ಜನೆ ಮಾಡಲಿ ಎಂದು ಆಗ್ರಹಿಸಿದ್ದಾರೆ.