ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪೊಳ್ಳು ಹೇಳಿಕೆ ನೀಡುತ್ತಿರುವುದರಲ್ಲಿ ಆಶ್ಚರ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಅಂದಮೇಲೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿತ್ತು. ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಬೇಕಿತ್ತು. ಅದನ್ನು ಬಿಟ್ಟು ಪೊಳ್ಳು ಹೇಳಿಕೆ ನೀಡುತ್ತಿರುವುದೇಕೆ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಒಂದಿಂಚು ಜಾಗವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲು ನಿಜಕ್ಕೂ ಸಿದ್ಧರಿಲ್ಲ ಎಂದ ಮೇಲೆ ಸಿಎಂ, ತಕ್ಷಣ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗಲಿ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ ಭರವಸೆ ನೀಡಲಿ ಎಂದು ಆಗ್ರಹಿಸಿದ್ದಾರೆ.