ಬೆಂಗಳೂರು: ವಿಧನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಪಡಿಸಿದ್ದು, ಅಂತಿಮವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ರಾಜ್ಯ ನಾಯಕರು ದೆಹಲಿಗೆ ದೌಡಾಯಿಸಲಿದ್ದಾರೆ.
120-150 ಅಭ್ಯರ್ಥಿಗಳನ್ನು ಒಳಗೊಂಡ ಮೊದಲ ಪಟ್ಟಿ ಸಿದ್ಧವಾಗಿದ್ದು, ಮೊದಲ ಪಟ್ಟಿ ಬಿಡುಗಡೆಗೂ ಮುನ್ನ ಅಂತಿಮವಾಗಿ ಚರ್ಚಿಸಲು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಮಾರ್ಚ್ 17ರಂದು ಸಭೆ ಕರೆದಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಲಿದ್ದಾರೆ.
ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಮೋಹನ್ ಪ್ರಕಾಶ್ ನೇತೃತ್ವದ ಸ್ಕ್ರೀನಿಂಗ್ ಕಮಿಟಿಯಲ್ಲಿ ಪರಿಶೀಲಿಸಿದ್ದು, ಅಂತಿಮ ಪಟ್ಟಿ ಹೈಕಮಾಂಡ್ ಗೆ ಕಳುಹಿಸಲಾಗಿದೆ. ಈ ನಿಟ್ಟಿನಲ್ಲಿ ಮಾರ್ಚ್ 17ರಂದು ನಡೆಯಲಿರುವ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಯಲಿದ್ದು, ಶೀಘ್ರದಲ್ಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.