ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಆರೋಪ ಮಾಡುತ್ತಿದ್ದಾರೆ. ಮೊದಲು ತಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂಬುದನ್ನು ಅರಿತು ಮಾತನಾಡಲಿ ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಸೈದ್ದಾಂತಿಕ ವಿರೋಧ ಇರಬೇಕು. ವೈಯಕ್ತಿಕ ಧ್ವೇಷ ಒಳ್ಳೆಯದಲ್ಲ. ಚುನಾವಣೆ ಬಂದಾಗ ಕಾಂಗ್ರೆಸ್ ನಾಯಕರು ಗಿಮಿಕ್ ಮಾಡ್ತಾರೆ. ಅದು ಅವರಿಗೆ ರಕ್ತಗತವಾಗಿ ಬಂದಿದೆ. ಪಿ ಎಸ್ ಐ ಅಕ್ರಮ ಕಂಡು ಹಿಡಿದಿದ್ದೇ ಗೃಹ ಸಚಿವರು. ಹಾಗಾಗಿ ಗೃಹ ಸಚಿವ ಅರಗ ಜ್ಞಾನೇಂದ್ರಗೆ ಅಭಿನಂದನೆ ಸಲ್ಲಿಸಬೇಕು. ಅದನ್ನು ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿರುವುದು ಸರಿಯಲ್ಲ ಎಂದರು.
ಇನ್ನು ಸಚಿವ ಅಶ್ವತ್ಥನಾರಾಯಣ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಬಿಟ್ ಕಾಯಿನ್ ವಿಚಾರದಲ್ಲಿಯೂ ಹಾಗೆ ಮಾಡಿದರು. ಕಾಂಗ್ರೆಸ್ ನಾಯಕರ ಆರೋಪಗಳಿಗೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿ ನಿಸ್ಪಕ್ಷಪಾತ ತನಿಖೆಗೆ ಸೂಚಿಸಿದೆ. ಪ್ರಕರಣದ ಹಿಂದಿನ ಕೈಗಳ ಬಗ್ಗೆ ಶೀಘ್ರದಲ್ಲಿಯೇ ಗೊತ್ತಾಗಲಿದೆ ಎಂದರು.